KPCC ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫೈನಲ್: ಹೈಕಮಾಂಡ್‌ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ

ಹಂಚಿಕೊಳ್ಳಿ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತೆರವಾದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯಿಂದ (AICC) ಅಧಿಕೃತ ಘೋಷಣೆ ಹೊರಬೀಳುವುದೊಂದೇ ಬಾಕಿ ಉಳಿದಿದೆ.

ಬುಧವಾರ ಸಂಜೆಯೊಳಗೆ ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಎಐಸಿಸಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯ ಕಾಂಗ್ರೆಸ್ ಘಟಕದಲ್ಲಿ ನಾಯಕತ್ವದ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ದೆಹಲಿ ಮಟ್ಟದಲ್ಲಿ ನಡೆದ ತೀವ್ರ ಚರ್ಚೆಗಳ ಬಳಿಕ ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದುಬಂದಿದೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನವೇ ಪಕ್ಷದ ನೂತನ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಿಸುವ ಮೂಲಕ ಪಕ್ಷದಲ್ಲಿ ಹೊಸ ಸಂಚಲನ ಮೂಡಿಸಲು ವರಿಷ್ಠರು ಮುಂದಾಗಿದ್ದಾರೆ.

ಅಹಿಂದ ಮತಬ್ಯಾಂಕ್ ಮತ್ತು ಒಬಿಸಿ ಕೋಟಾ ಲೆಕ್ಕಾಚಾರ 

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ) ಮತಬ್ಯಾಂಕ್ ಅನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುವ ದೃಷ್ಟಿಯಿಂದ ಬಿ.ಕೆ. ಹರಿಪ್ರಸಾದ್ ಅವರಿಗೆ ಮಣೆ ಹಾಕಲಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಒಬಿಸಿ (OBC) ಕೋಟಾದಡಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಒಲಿದುಬಂದಿದೆ.

ದೀರ್ಘಕಾಲದ ರಾಜಕೀಯ ಅನುಭವ, ರಾಷ್ಟ್ರೀಯ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿದ ಚಾತುರ್ಯ, ಹಿಂದುಳಿದ ವರ್ಗಗಳ ಮೇಲಿನ ಅವರ ಪ್ರಭಾವ ಹಾಗೂ ಹೈಕಮಾಂಡ್ ನಾಯಕರ ಜೊತೆಗಿನ ನಿಕಟ ಒಡನಾಟವು ಅವರ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಅಂತಿಮವಾಗಿ ಎಐಸಿಸಿ ಹೊರಡಿಸುವ ಅಧಿಕೃತ ಆದೇಶಕ್ಕಾಗಿ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಕಾತುರದಿಂದ ಕಾಯುತ್ತಿದ್ದಾರೆ.

Leave a Reply

Your email address will not be published. Required fields are marked *

Advertisement


This will close in 3 seconds