ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ!: ಕರಾವಳಿ ಸೇರಿದಂತೆ 7 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು (Monsoon Weather) ಮಳೆ ಸಂಪೂರ್ಣವಾಗಿ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ತೀವ್ರ ಬಿರುಗಾಳಿ ಸಹಿತ ಪ್ರಬಲ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ರಾಜ್ಯದ 7 ಪ್ರಮುಖ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಜಾರಿಗೊಳಿಸಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ (115.6mm ನಿಂದ 204.4mm ವರೆಗೆ) ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಮೂರೂ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್’ ಘೋಷಿಸಿದೆ. ಸಮುದ್ರ ತೀರದಲ್ಲಿ ಭಾರಿ ಬಿರುಗಾಳಿ ಬೀಸಲಿದ್ದು, ಅಲೆಗಳ ವೇಗ ಹೆಚ್ಚಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ ಮತ್ತು ವಿಜಯಾಪುರ ಜಿಲ್ಲೆಗಳಿಗೂ ಸಹ ಆರೆಂಜ್ ಅಲರ್ಟ್ ನೀಡಲಾಗಿದ್ದು, ಇಲ್ಲಿ ಗಂಟೆಗೆ ಬರೋಬ್ಬರಿ 40-50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಇದರೊಂದಿಗೆ ಧಾರವಾಡ, ಗದಗ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ (Yellow Alert) ಪ್ರಕಟಿಸಲಾಗಿದೆ. ಇನ್ನುಳಿದಂತೆ ಬೀದರ್, ಹಾವೇರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಇನ್ನುಳಿದಂತೆ ಸಿಲಿಕಾನ್ ಸಿಟಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *