ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಸೃಷ್ಟಿಯಾಗಿರುವ ಭಿನ್ನಮತ ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಮಗೆ ನೀಡಿರುವ ಖಾತೆಯ ಬಗ್ಗೆ ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಖಾತೆ ಹಂಚಿಕೆಯಲ್ಲಿ ಹಿರಿತನವನ್ನು ಪರಿಗಣಿಸುತ್ತಿಲ್ಲ ಎಂದು ಹೈಕಮಾಂಡ್ ವಿರುದ್ಧವೇ ಬೇಸರ ವ್ಯಕ್ತಪಡಿಸಿರುವ ಅವರು, ಆಹಾರ ಇಲಾಖೆ ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ, ತಾವು ಈಗಾಗಲೇ 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿಯಾಗಿದ್ದರೂ ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಪಕ್ಷದಲ್ಲಿ ಎಲ್ಲರನ್ನೂ ಸಮತೋಲನವಾಗಿ ನೋಡಬೇಕಿತ್ತು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ನಾಯಕರನ್ನೂ ಒಂದೇ ಕಣ್ಣಿನಿಂದ ನೋಡಬೇಕು ಎಂದು ಅವರು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ರೀತಿಯ ಗೊಂದಲಗಳು ಪಕ್ಷಕ್ಕೆ ಒಳ್ಳೆಯದಲ್ಲ, ಇಲಾಖೆಗಳ ಹಂಚಿಕೆ ಸರಿಯಾಗಿಲ್ಲದಿದ್ದರೆ ಮುಂದಿನ 2028 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗುವ ಆತಂಕವಿದೆ ಎಂದು ಅವರು ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದಾರೆ.
ಖಾತೆ ಬದಲಾವಣೆಗಾಗಿ ತಾವು ಈಗಾಗಲೇ ದೆಹಲಿ ನಾಯಕರಿಗೆ ಮನವಿ ಮಾಡಿರುವುದಾಗಿ ಮುನಿಯಪ್ಪ ತಿಳಿಸಿದ್ದಾರೆ. ತಾವು ಈ ಹಿಂದೆ 3 ವರ್ಷಗಳ ಕಾಲ ಆಹಾರ ಇಲಾಖೆಯನ್ನು ನಿಭಾಯಿಸಿರುವ ಅನುಭವ ಹೊಂದಿದ್ದು, ಈ ಬಾರಿ ತಮಗೆ ಜನರ ನೇರ ಸೇವೆಗೆ ಮುಕ್ತ ಅವಕಾಶವಿರುವ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾಗಿ ಹೇಳಿದ್ದಾರೆ.
ಇತ್ತೀಚೆಗಷ್ಟೇ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದೇನೆ, ಎಲ್ಲರನ್ನೂ ಒಂದೇ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಕೇಳಿಕೊಂಡಿದ್ದು, ತಮ್ಮ ಖಾತೆಯನ್ನು ಶೀಘ್ರದಲ್ಲೇ ಬದಲಾವಣೆ ಮಾಡಿಕೊಡಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆಯಿಂದ ಕಂಗೆಟ್ಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುನಿಯಪ್ಪ ಅವರ ಈ ಬಹಿರಂಗ ಬಂಡಾಯವು ಮತ್ತೊಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.


Leave a Reply