ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬೆಳ್ಳಂಬೆಳಿಗ್ಗೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಬರೋಬ್ಬರಿ 5.87 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು (Hydroponic Ganja) ಜಪ್ತಿ ಮಾಡಿದ್ದಾರೆ. ಥಾಯ್ಲೆಂಡ್ನ ಬ್ಯಾಂಕಾಕ್ನಿಂದ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಅಧಿಕಾರಿಗಳು ಯಶಸ್ವಿಯಾಗಿ ಬಲೆಯಲ್ಲಿ ಬೀಳಿಸಿಕೊಂಡಿದ್ದಾರೆ.
ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿಳಿದ ವಿಮಾನದಲ್ಲಿದ್ದ ಪ್ರಯಾಣಿಕರ ಚಲನವಲನದ ಮೇಲೆ ಸಂಶಯಗೊಂಡ ಅಧಿಕಾರಿಗಳು, ಅವರನ್ನು ವಶಕ್ಕೆ ಪಡೆದು ತೀವ್ರ ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಅವರ ಲಗೇಜ್ ಬ್ಯಾಗ್ಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ವಸ್ತು ಬೆಳಕಿಗೆ ಬಂದಿದೆ. ಅಧಿಕಾರಿಗಳು ನಡೆಸಿದ ಈ ಜಂಟಿ ಕಾರ್ಯಾಚರಣೆಯಲ್ಲಿ ಒಟ್ಟು 16 ಕೆಜಿ 880 ಗ್ರಾಂ ತೂಕದ ಹೈಡ್ರೋಫೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 5.87 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ನಡೆದ ಎರಡು ಪ್ರತ್ಯೇಕ ಕಳ್ಳಸಾಗಣೆ ಪ್ರಕರಣಗಳಲ್ಲಿ ಈ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಸಿಕ್ಕಿಬಿದ್ದಿರುವ ಇಬ್ಬರು ಪ್ರಯಾಣಿಕರ ವಿರುದ್ಧ ಮಾದಕ ದ್ರವ್ಯ ವಿರೋಧಿ ಕಾನೂನು ಅಡಿಯಲ್ಲಿ ಅಂದರೆ ಎನ್ಡಿಪಿಎಸ್ (NDPS) ಕಾಯ್ದೆಯಡಿ ಗಂಭೀರ ಪ್ರಕರಣಗಳನ್ನು ದಾಖಲಿಸಿಕೊಂಡು ಬಂಧಿಸಲಾಗಿದೆ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆದು, ಇವರ ಹಿಂದೆ ಇರುವ ಅಂತರರಾಷ್ಟ್ರೀಯ ಡ್ರಗ್ಸ್ ಮಾಫಿಯಾದ ಕಿಂಗ್ಪಿನ್ಗಳ ಪತ್ತೆಗಾಗಿ ತೀವ್ರ ವಿಚಾರಣೆ ಮುಂದುವರಿಸಿದ್ದಾರೆ.




Leave a Reply