ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Union Finance Minister Nirmala Sitharaman) ಅವರು ಉಡುಪಿ ಜಿಲ್ಲೆಯ ವಿವಿಧ ಪ್ರಮುಖ ಮತ್ತು ಐತಿಹಾಸಿಕ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ದೇವದರ್ಶನ ಪಡೆದಿದ್ದಾರೆ. ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಸಚಿವರು ನಡೆಸಿದ ಈ ಆಧ್ಯಾತ್ಮಿಕ ಪಯಣ ಕರಾವಳಿ ಭಾಗದಲ್ಲಿ ಸಾರ್ವಜನಿಕರ ಗಮನ ಸೆಳೆದಿದೆ.
ತಮ್ಮ ಧಾರ್ಮಿಕ ಭೇಟಿಯ ಭಾಗವಾಗಿ ಜಗತ್ಪ್ರಸಿದ್ಧ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ, ಕಡಗೋಲು ಕೃಷ್ಣನ ದರ್ಶನ ಪಡೆದರು. ಇದೇ ವೇಳೆ ಮಠದ ಆವರಣದಲ್ಲಿರುವ ಪುರಾತನ ಶ್ರೀ ಅನಂತೇಶ್ವರ ಹಾಗೂ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಕೇಂದ್ರ ಸಚಿವರಿಗೆ ಮಠದ ವತಿಯಿಂದ ಗೌರವಾರ್ಪಣೆ ಸಲ್ಲಿಸಿ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಇದಾದ ಬಳಿಕ ಅವರು ಪ್ರಸಿದ್ಧ ಕಾಪು ಹೊಸ ಮಾರಿಗುಡಿ ದೇವಸ್ಥಾನ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ದೇವಾಲಯಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಚಿವರನ್ನು ಸ್ವಾಗತಿಸಿದರು.




Leave a Reply