ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮರು ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ಅಧಿಕೃತವಾಗಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ ಭವನದಲ್ಲಿರುವ ತಮ್ಮ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಖರ್ಗೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕರ್ನಾಟಕವನ್ನು ಪ್ರತಿನಿಧಿಸುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕೈಯಲ್ಲಿ ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು, ಹಿಂದಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಈ ಬಾರಿಯ ವಿಶೇಷವಾಗಿತ್ತು. ಖರ್ಗೆ ಅವರ ಸುದೀರ್ಘ ಸಂಸದೀಯ ಅನುಭವ ಮತ್ತು ಮಾರ್ಗದರ್ಶನದಿಂದ ಮುಂಬರುವ ದಿನಗಳಲ್ಲಿ ಮೇಲ್ಮನೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಭಾಪತಿ ಸಿ. ಪಿ. ರಾಧಾಕೃಷ್ಣನ್ ಅವರು ಆಶಿಸಿ ಶುಭ ಕೋರಿದ್ದಾರೆ.
ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ ಖರ್ಗೆ
ಪ್ರಮಾಣ ವಚನ ಸ್ವೀಕಾರದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ರಾಜಕೀಯ ಒಡನಾಡಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಾರ್ವಜನಿಕ ಜೀವನ ಮತ್ತು ಸಂಸದೀಯ ಸೇವೆಯ ಈ ಸುದೀರ್ಘ ಪ್ರಯಾಣದಲ್ಲಿ ತಮ್ಮ ಮೇಲೆ ನಿರಂತರವಾಗಿ ಅಪಾರ ವಿಶ್ವಾಸವಿಟ್ಟ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಇಂಡಿಯಾ (INDIA) ಒಕ್ಕೂಟದ ಎಲ್ಲಾ ಸಹೋದ್ಯೋಗಿಗಳಿಗೆ ಅವರು ಹೃತೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಜನರ ಧ್ವನಿಯಾಗಿ ಜವಾಬ್ದಾರಿ ಮುಂದುವರಿಯಲಿದೆ
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ ಅವರು, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ದೇಶದ ಮತ್ತು ಜನಸಾಮಾನ್ಯರ ಸೇವೆಯನ್ನು ಮುಂದುವರಿಸುತ್ತಿರುವುದು ತಮಗೆ ಹೆಮ್ಮೆಯ ಹಾಗೂ ಜವಾಬ್ದಾರಿಯ ವಿಷಯವಾಗಿದೆ ಎಂದು ತಿಳಿಸಿದರು. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಲೋಪದೋಷಗಳು ಹಾಗೂ ವೈಫಲ್ಯಗಳನ್ನು ತೀವ್ರವಾಗಿ ಪ್ರಶ್ನಿಸುವ ಮತ್ತು ಜನರ ಧ್ವನಿಯನ್ನು ಅತ್ಯಂತ ಪ್ರಾಮಾಣಿಕವಾಗಿ ಸಂಸತ್ತಿನ ಉಭಯ ಸದನಗಳಲ್ಲಿ ಎತ್ತಿಹಿಡಿಯುವ ಕೆಲಸವನ್ನು ನಾನು ಎಂದಿನಂತೆ ಕಟ್ಟುನಿಟ್ಟಾಗಿ ಮುಂದುವರಿಸುತ್ತೇನೆ ಎಂದು ಅವರು ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ ಮತ್ತು ವಯನಾಡ್ ಸಂಸದರಾದ ಪ್ರಿಯಾಂಕಾ ಗಾಂಧಿ ವಾದ್ರಾ ಉಪಸ್ಥಿತರಿದ್ದರು. ಇವರೊಂದಿಗೆ ಆಡಳಿತ ಪಕ್ಷದ ಪರವಾಗಿ ಕೇಂದ್ರ ಸಚಿವರಾದ ಜಿ. ಪಿ. ನಡ್ಡಾ, ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್ ಮತ್ತು ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಅವರು ಪಾಲ್ಗೊಂಡು ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

Leave a Reply