ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ DC ಸಂಗಪ್ಪ

ಹಂಚಿಕೊಳ್ಳಿ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಹಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಊಟದ ಬಳಿಕ ವಾಂತಿ ಮತ್ತು ಹೊಟ್ಟೆನೋವಿನಿಂದ ಬಳಲಿದ ವಿದ್ಯಾರ್ಥಿಗಳಲ್ಲಿ ಮೂವರ ಸ್ಥಿತಿ ತೀವ್ರವಾಗಿದ್ದರಿಂದ, ಅವರನ್ನು ತಕ್ಷಣವೇ ಹೆಚ್ಚಿನ ಹಾಗೂ ತುರ್ತು ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 9 ವಿದ್ಯಾರ್ಥಿಗಳಿಗೆ ಮುಧೋಳ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ, ವೈದ್ಯರಿಂದ ಮಾಹಿತಿ

​ಪ್ರಕರಣದ ಗಂಭೀರತೆಯನ್ನು ಅರಿತ ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ತಕ್ಷಣವೇ ಜಿಲ್ಲಾಸ್ಪತ್ರೆಗೆ ದೌಡಾಯಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯ ಕುರಿತು ವೈದ್ಯರಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಮಕ್ಕಳಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಅವರ ಪ್ರಸ್ತುತ ಆರೋಗ್ಯ ಸ್ಥಿತಿಗತಿಯ ಬಗ್ಗೆ ವೈದ್ಯರು ಜಿಲ್ಲಾಧಿಕಾರಿಗಳಿಗೆ ಎಳೆಎಳೆಯಾಗಿ ವಿವರಿಸಿದರು.

ಚೇತರಿಸಿಕೊಳ್ಳುತ್ತಿರುವ ಮಕ್ಕಳು

​ಸಕಾಲದಲ್ಲಿ ಸೂಕ್ತ ವೈದ್ಯಕೀಯ ನೆರವು ದೊರೆತ ಕಾರಣ, ಜಿಲ್ಲಾಸ್ಪತ್ರೆ ಹಾಗೂ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿರುವುದು ಮತ್ತು ಪ್ರಾಣಾಪಾಯದಿಂದ ಪಾರಾಗಿರುವುದರಿಂದ ಪೋಷಕರು ಹಾಗೂ ಶಾಲಾ ಸಿಬ್ಬಂದಿ ಕೊಂಚ ನಿರಾಳರಾಗಿದ್ದಾರೆ. ಆಹಾರದಲ್ಲಿನ ವ್ಯತ್ಯಾಸವೇ ಈ ಘಟನೆಗೆ ಕಾರಣವೇ ಎಂಬ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Advertisement


This will close in 3 seconds