
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಬಾಕಿ ಉಳಿದಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಗಳನ್ನು ಪ್ರಸಕ್ತ ವರ್ಷದ ಕೊನೆಯೊಳಗೆ ಪೂರ್ಣಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಅವಧಿ ಮುಗಿದಿರುವ ಗ್ರಾಮ ಪಂಚಾಯತಿಗಳಿಗೆ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸುವ ಗುರಿಯನ್ನು ಹೊಂದಲಾಗಿದೆ ಎಂದು ವಿಧಾನಪರಿಷತ್ತಿನಲ್ಲಿ ತಿಳಿಸಲಾಗಿದೆ.
ವಿಧಾನಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು ನಿಯಮ 72ರ ಅಡಿಯಲ್ಲಿ ತಂದ ಗಮನಸೆಳೆಯುವ ಸೂಚನೆಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಪರವಾಗಿ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಅವರು ಉತ್ತರಿಸಿದರು. ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಕಾರ್ಯಗಳು ಪ್ರಸ್ತುತ ಪ್ರಗತಿಯಲ್ಲಿದ್ದು, ಇವು ಮುಗಿಯುತ್ತಿದ್ದಂತೆ ಅಂತಿಮ ವರದಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿಗಳಿಗೆ ನಿರ್ದೇಶನ:
ಅವಧಿ ಮುಗಿದಿರುವ ಗ್ರಾಮ ಪಂಚಾಯತಿಗಳ ಚುನಾವಣೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಹಂತದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ. ಅಧಿಕಾರಿಗಳ ಹಂತದ ಸಿದ್ಧತೆಗಳು ಮುಗಿದ ತಕ್ಷಣವೇ ರಾಜ್ಯ ಚುನಾವಣಾ ಆಯೋಗದ ಸಹಯೋಗದೊಂದಿಗೆ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆಯುವ ಸಾಧ್ಯತೆಯಿದೆ.











Leave a Reply