
ಶಿರಸಿ/ರಾಯಚೂರು: ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳನ್ನು ಖಂಡಿಸಿ ಬಿಜೆಪಿ ಆಯೋಜಿಸಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ರೈತ ಮೋರ್ಚಾ ಮುಖಂಡರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡರು.
ಪಾದಯಾತ್ರೆಯ ಅಂಗವಾಗಿ ಗುರುವಾರ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದಿಂದ ಸಿಂಧನೂರುವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಉತ್ತರ ಕನ್ನಡ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತ ಮೋರ್ಚಾ ಪದಾಧಿಕಾರಿಗಳು ಹೋರಾಟದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಹೇಳಿದರು. ಮುಖ್ಯಮಂತ್ರಿ ಅವರಿಗೆ ರಿಯಲ್ ಎಸ್ಟೇಟ್ ಕ್ಷೇತ್ರದ ಬಗ್ಗೆ ಇರುವ ಆಸಕ್ತಿ ರೈತರು, ಮಹಿಳೆಯರು ಹಾಗೂ ನಿರುದ್ಯೋಗಿ ಯುವಕರ ಸಮಸ್ಯೆಗಳ ಪರಿಹಾರದತ್ತ ಕಾಣುತ್ತಿಲ್ಲ ಎಂದು ಅವರು ಆರೋಪಿಸಿದರು.
https://hallinews.com/rajya/28773/
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ವಿವಿಧ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪಗಳು ಸರ್ಕಾರದ ವಿರುದ್ಧ ಕೇಳಿಬರುತ್ತಿವೆ. ಮೂಡಾ ಪ್ರಕರಣ, ವಾಲ್ಮೀಕಿ ನಿಗಮದ ಹಣದ ಅವ್ಯವಹಾರ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ವಿಜಯೇಂದ್ರ, ರೈತರ ಸಮಸ್ಯೆಗಳತ್ತ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದಿರುವ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದ ಅವರು, ರೈತರ ಸಂಕಷ್ಟ, ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಬೇಕಿದೆ ಎಂದರು.
ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಸರ್ಕಾರದ ಮೇಲೆ ಹೋರಾಟದ ಪರಿಣಾಮ ಕಂಡುಬರುತ್ತಿದೆ. ಬರ ಪರಿಹಾರದ ಎರಡನೇ ಹಂತದ ಅನುದಾನ ಬಿಡುಗಡೆಗೆ ಸರ್ಕಾರ ಮುಂದಾಗಿರುವುದು ಕೂಡ ಹೋರಾಟದ ಫಲಿತಾಂಶಗಳಲ್ಲಿ ಒಂದಾಗಿದೆ ಎಂದು ವಿಜಯೇಂದ್ರ ಹೇಳಿದರು.
ಇದೇ ವೇಳೆ ದಲಿತ ಸಮುದಾಯವನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಅವರು, ಜನವಿರೋಧಿ ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ತನ್ನ ಹೋರಾಟ ಮುಂದುವರಿಸಲಿದೆ ಎಂದು ತಿಳಿಸಿದರು.
ಪಾದಯಾತ್ರೆಯಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರಮುಖರಾದ ಶಿವಕುಮಾರ್ ನಾಯ್ಕ್ ಕೊಂಡ್ಲಿ, ಬಸಣ್ಣ ಕುರುಬಕಟ್ಟಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಿಂದ ಆಗಮಿಸಿದ್ದ ನೂರಾರು ರೈತ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ದರು.











Leave a Reply