ಮುಂಡಗೋಡ ಬಂದ್ ಹಾಗೂ ಪ್ರತಿಭಟನೆಗೆ ಶಾಸಕ ಶಿವರಾಮ ಹೆಬ್ಬಾರ್ ಸಂಪೂರ್ಣ ಬೆಂಬಲ: ಪಕ್ಷಭೇದ ಮರೆತು ಶಾಂತಿಯುತ ಹೋರಾಟಕ್ಕೆ ಹೆಬ್ಬಾರ್ ಕರೆ!

ಹಂಚಿಕೊಳ್ಳಿ

ಯಲ್ಲಾಪುರ: 14 ವರ್ಷದ ಬಾಲಕಿಯ ಮೇಲೆ 65 ವರ್ಷದ ಅನ್ಯಕೋಮಿನ ವ್ಯಕ್ತಿಯಿಂದ ನಡೆದ ಲೈಂಗಿಕ ದೌರ್ಜನ್ಯ  ವಿರುದ್ದ ಮುಂಡಗೋಡಿನಲ್ಲಿ ಗುರುವಾರ ನಡೆಯಲಿರುವ ಪ್ರತಿಭಟನಾ ಮೆರವಣಿಗೆ ಹಾಗೂ ಮುಂಡಗೋಡ ಬಂದ್‌ಗೆ ಸಂಪೂರ್ಣ ಬೆಂಬಲವಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಇತ್ತೀಚೆಗೆ ಬೆಳಕಿಗೆ ಬಂದ 14 ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಅವರು, ಈ ಘಟನೆಯನ್ನು ಜಾತಿ ಅಥವಾ ಧರ್ಮದ ದೃಷ್ಟಿಯಿಂದ ನೋಡದೆ ಮಾನವೀಯ ನೆಲೆಗಟ್ಟಿನಲ್ಲಿ ಎಲ್ಲರೂ ಖಂಡಿಸಬೇಕು ಎಂದು ಹೇಳಿದ್ದಾರೆ.

ಪ್ರಕರಣದ ಆರೋಪಿಯ ವಿರುದ್ಧ ಸಮಗ್ರ ತನಿಖೆ ನಡೆಸಿ, ಕಾನೂನಿನ ಪ್ರಕಾರ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಅಮಾನವೀಯ ಕೃತ್ಯಗಳ ವಿರುದ್ಧ ಜಾತಿ, ಧರ್ಮ ಹಾಗೂ ರಾಜಕೀಯ ಪಕ್ಷಗಳ ಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷದವರು ಈ ಸೂಕ್ಷ್ಮ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳದೆ, ಬಾಲಕಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಮನವಿ ಮಾಡಿದ್ದಾರೆ.

ನಾಳಿನ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಂಡಗೋಡ ತಾಲೂಕು ಅಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಮೂಲಕ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *