ನಾಗಸಂದ್ರ Metro ನಿಲ್ದಾಣದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಿದ ಸಿಬ್ಬಂದಿ, ತಪ್ಪಿದ ಭಾರಿ ಅನಾಹುತ

ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಮಟ್ಟದ ಅನಾಹುತ ಸಂಭವಿಸಿಲ್ಲ. ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್ ಸಂಪರ್ಕಿಸುವ ಮಾರ್ಗದಲ್ಲಿ ಬರುವ ಈ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಘಟನೆಯ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ನಿಖರ ಮಾಹಿತಿಯನ್ನು ಒದಗಿಸಿದೆ. ಬಿಎಂಆರ್ಸಿಎಲ್ ನೀಡಿರುವ ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ ಸುಮಾರು 1:30 ರ ಹೊತ್ತಿಗೆ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ಪ್ರದೇಶದ ಸಮೀಪ ಅಳವಡಿಸಲಾಗಿದ್ದ ಸೂಚನಾ ಫಲಕವೊಂದರಲ್ಲಿ ಆಕಸ್ಮಿಕವಾಗಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. 

ಈ ಬಗ್ಗೆ ಮಾಹಿತಿ ಲಭ್ಯವಾದ ತಕ್ಷಣವೇ ಮೆಟ್ರೋ ಕಾರ್ಯಾಚರಣೆ ವಿಭಾಗ ಹಾಗೂ ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿವೆ. ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾರಿಗೂ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ.

ಬೆಂಕಿ ಅವಘಡದ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ ಎಂಬ ಆತಂಕ ಪ್ರಯಾಣಿಕರಲ್ಲಿ ಮನೆಮಾಡಿತ್ತು. ಆದರೆ, ಈ ಘಟನೆಯಿಂದ ಮೆಟ್ರೋ ರೈಲು ಸಂಚಾರ ಸೇವೆಗಳಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿಲ್ಲ ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ. ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸಂಪೂರ್ಣವಾಗಿ ಸುಗಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *