ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ (DK Shivakumar) ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಜೊತೆ ಮಹತ್ವದ ಜಂಟಿ ಸಭೆ ನಡೆಸಿದ ಅವರು, ಸರ್ಕಾರದ ಕಾರ್ಯವೈಖರಿ, ಯೋಜನೆಗಳ ಅನುಷ್ಠಾನ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ಸ್ಪಷ್ಟ ಮತ್ತು ಖಡಕ್ ಸಂದೇಶ ರವಾನಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿರುವ ‘ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್’ ಸೇರಿದಂತೆ ಸರ್ಕಾರದ ಎಲ್ಲಾ 6 ಪ್ರಮುಖ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರುವಂತೆ ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು ಎಂದು ಬಣ್ಣಿಸಿರುವ ಸಿಎಂ, ಯಾವುದೇ ಕಾರಣಕ್ಕೂ ಆಡಳಿತ ಹಾದಿ ತಪ್ಪಲು ಬಿಡುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಭ್ರಷ್ಟಾಚಾರಕ್ಕೆ ಕಡಿವಾಣ: ಅಧಿಕಾರಿಗಳಿಗೆ ಸಿಎಂ ಕಿವಿಮಾತು
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದುವಂತೆ ಕಟ್ಟುನಿಟ್ಟಿನ ತಾಕೀತು ಮಾಡಿದ್ದಾರೆ. ರಾಜ್ಯದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿ ದುರ್ಬಳಕೆಯಾಗುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಇದಕ್ಕೆ ತಕ್ಷಣವೇ ಬ್ರೇಕ್ ಹಾಕಿ ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಗುಡುಗಿದ್ದಾರೆ.
ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಆತ್ಮಸಾಕ್ಷಿ ಒಪ್ಪುವ ಹಾಗೆ ಅತ್ಯಂತ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸಿಎಂ ಕಿವಿಮಾತು ಹೇಳಿದ್ದಾರೆ. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ ಜನ ಮೆಚ್ಚುವಂತೆ ಕೆಲಸ ಮಾಡುವ ಮೂಲಕ ಸರ್ಕಾರಕ್ಕೂ ಮತ್ತು ಅಧಿಕಾರಿಗಳಿಗೂ ಒಳ್ಳೆಯ ಹೆಸರು ತರುವಂತೆ ಅವರು ಕರೆ ನೀಡಿದ್ದಾರೆ.
ರೌಡಿಗಳ ಹೆಡೆಮುರಿ ಕಟ್ಟಲು ಖಾಕಿ ಪಡೆಗೆ ಫ್ರೀಹ್ಯಾಂಡ್
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸಿಎಂ ಡಿ.ಕೆ. ಶಿವಕುಮಾರ್ ಕಠಿಣ ನಿರ್ದೇಶನಗಳನ್ನು ನೀಡಿದ್ದು, ತಮ್ಮ ಕರ್ತವ್ಯ ನಿರ್ವಹಿಸಲು ಐಪಿಎಸ್ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು ಎಂದು ಅವರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು ಹಾಗೂ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಪೊಲೀಸ್ ಅಧಿಕಾರಿಗಳು ಮುಕ್ತವಾಗಿ ಮತ್ತು ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು ಎಂದು ಅವರು ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Leave a Reply