ಚಿಕ್ಕಬಳ್ಳಾಪುರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕಣ್ಣೀರು ತರಿಸುವಂತಹ ಭೀಕರ ರಸ್ತೆ ಅಪಘಾತವೊಂದು (Road Accident) ಸಂಭವಿಸಿದೆ. ವೇಗವಾಗಿ ಬಂದ ಆಂಧ್ರಪ್ರದೇಶ ಸರ್ಕಾರಿ ಸಾರಿಗೆ ಸಂಸ್ಥೆಯ (APSRTC) ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳನ್ನು ರತ್ನಮ್ಮ (50 ವರ್ಷ) ಮತ್ತು ಲಕ್ಷ್ಮಣ (55 ವರ್ಷ) ಎಂದು ಗುರುತಿಸಲಾಗಿದೆ. ಇವರಿಬ್ಬರು ತಮ್ಮ ಟಿವಿಎಸ್ ಎಕ್ಸ್‌ಎಲ್ (TVS XL) ವಾಹನದಲ್ಲಿ ಸಂಚರಿಸುತ್ತಿದ್ದಾಗ ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44 ರ (NH 44) ಸಾದಲಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಎಪಿಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸವಾರರು ನೇರವಾಗಿ ಬಸ್ಸಿನ ಹಿಂಬದಿಯ ಚಕ್ರದಡಿ ಸಿಲುಕಿ, ದೇಹ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಹೆದ್ದಾರಿಯುದ್ದಕ್ಕೂ ರಕ್ತದ ಮಡುವು ನಿರ್ಮಾಣವಾಗಿದ್ದು, ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೆರೇಸಂದ್ರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆದ್ದಾರಿಯಲ್ಲಿ ಉಂಟಾಗಿದ್ದ ಟ್ರಾಫಿಕ್ ಜಾಮ್ ಅನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ಕುರಿತು ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply