ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚಟುವಟಿಕೆಗಳು ತೀವ್ರಗೊಳ್ಳುತ್ತಿದ್ದು, ಜೂನ್ 5ರವರೆಗೆ ಕರ್ನಾಟಕದಾದ್ಯಂತ ಭಾರೀ ಮಳೆ (Rain) , ಗುಡುಗು ಮತ್ತು ಮಿಂಚಿನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಜ್ಜೆ ಹೆಜ್ಜೆಗೂ ವರುಣನ ಅಬ್ಬರ ಹೆಚ್ಚಾಗಲಿದ್ದು, ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.
ದಿನಾವಾರು ಭಾರೀ ಮಳೆಯಾಗಲಿರುವ ಜಿಲ್ಲೆಗಳ ಕಂಪ್ಲೀಟ್ ವಿವರ:

-
ಜೂನ್ 2 (ಇಂದು): ಉತ್ತರ ಕರ್ನಾಟಕದ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇತ್ತ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ವಿಶೇಷ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು-ಮಿಂಚಿನ ಆರ್ಭಟ ಜೋರಾಗಿರಲಿದೆ.
-
ಜೂನ್ 3: ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆರಂಭವಾಗಲಿದೆ. ಇದರೊಂದಿಗೆ ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ ಹಾಗೂ ಮಲೆನಾಡಿನ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಚುರುಕಾಗಲಿದೆ.
-
ಜೂನ್ 4: ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರಿಯಲಿದ್ದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೂ ಭಾರೀ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದೆ.
-
ಜೂನ್ 5: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಮುಂದುವರಿಯಲಿದೆ.
ಉತ್ತರ ಒಳನಾಡಿನಲ್ಲಿ ಜೂನ್ 5 ರವರೆಗೆ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು (ಜೂನ್ 2) 30-40 ಕಿ.ಮೀ ವೇಗದ ಗಾಳಿ ಇರಲಿದ್ದು, ಜೂನ್ 3 ರಿಂದ ಮಳೆಯ ಪ್ರಮಾಣ ದುಪ್ಪಟ್ಟಾಗಲಿದೆ.
ಬೆಂಗಳೂರಿನ ಹವಾಮಾನ ಹೇಗಿರಲಿದೆ?
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಮುಂದಿನ 24 ರಿಂದ 48 ಗಂಟೆಗಳ ಕಾಲ ನಗರದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಮಳೆಯ ಮುನ್ನೆಚ್ಚರಿಕೆಯೊಂದಿಗೆ ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ.


Leave a Reply