ವರ್ಷಾಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ, 4000 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಹಂಚಿಕೊಳ್ಳಿ

ರಾಜ್ಯದಲ್ಲಿ 2026ರ ಅಂತ್ಯದೊಳಗಾಗಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಗಳನ್ನು ಯಾವುದೇ ವಿಳಂಬವಿಲ್ಲದೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ನೂತನ ಸಚಿವ ಈಶ್ವರ್‌ ಖಂಡ್ರೆ ಮಹತ್ವದ ಘೋಷಣೆ ಮಾಡಿದ್ದಾರೆ. 

ತಮ್ಮ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಪಂಚಾಯತ್‌ ರಾಜ್‌ ಕಾಯ್ದೆಗೆ ತಿದ್ದುಪಡಿ ತಂದಿದೆ ಹಾಗೂ ಬಹುತೇಕ ಕಡೆಗಳಲ್ಲಿ ಪಂಚಾಯಿತಿಗಳನ್ನು ಪುರಸಭೆ ಮತ್ತು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಪ್ರಸ್ತುತ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ ಶೇಕಡಾ 80 ರಷ್ಟು ಪ್ರಕ್ರಿಯೆ ಪೂರ್ಣಗೊಂಡಿದೆ. ಬಾಗಲಕೋಟೆ, ಹಾವೇರಿ, ಬೆಳಗಾವಿ, ಕಲಬುರಗಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಕೆಲ ತಾಂತ್ರಿಕ ಕಾರಣಗಳಿಂದ ಪ್ರಕ್ರಿಯೆ ವಿಳಂಬವಾಗಿದ್ದು, ಮುಂದಿನ ಎಂಟು ವಾರಗಳಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. 

ಮುಂದಿನ ಎರಡು ತಿಂಗಳೊಳಗಾಗಿ ಮೀಸಲಾತಿ ಹಂಚಿಕೆಯನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಲಾಗುವುದು. ಆ ಬಳಿಕ ರಾಜ್ಯ ಚುನಾವಣಾ ಆಯೋಗವು ಅಧಿಕೃತವಾಗಿ ಚುನಾವಣಾ ದಿನಾಂಕ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. 

4000 ಹುದ್ದೆಗಳ ಭರ್ತಿಗೆ ಕ್ರಮ

ಚುನಾವಣಾ ಸಿದ್ಧತೆಗಳ ಜೊತೆಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಇಲಾಖೆಯಲ್ಲಿ ಒಟ್ಟು 25,540 ಮಂಜೂರಾದ ಹುದ್ದೆಗಳಿದ್ದು, ಅದರಲ್ಲಿ 8,770 ಹುದ್ದೆಗಳು ಖಾಲಿ ಇವೆ. ಆ ಪೈಕಿ ತಕ್ಷಣಕ್ಕೆ 4,000 ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಈಗಾಗಲೇ 1,400 ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದ್ದು, ಎ ವರ್ಗದ ಹುದ್ದೆಗಳನ್ನು ಕೆಪಿಎಸ್‌ಸಿ ಮೂಲಕ ಹಾಗೂ ಉಳಿದ ವರ್ಗದ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಅತ್ಯಂತ ಪಾರದರ್ಶಕವಾಗಿ ಭರ್ತಿ ಮಾಡಲಾಗುವುದು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಿರ್ಧಾರದಂತೆ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಾದ್ಯಂತ ನೇಮಕಾತಿ ಪ್ರಕ್ರಿಯೆಯು ಶೀಘ್ರವೇ ಆರಂಭವಾಗಲಿದೆ.

ಪ್ರತಿ ಹಳ್ಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಗುರಿ

ರಾಜ್ಯದ ಪ್ರತಿ ಹಳ್ಳಿಗೂ ಶುದ್ಧ ಕುಡಿಯುವ ನೀರು ಪೂರೈಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಇದೇ ವೇಳೆ ಸಚಿವರು ಪುನರುಚ್ಚರಿಸಿದರು. ಕಲುಷಿತ ನೀರಿನ ಸೇವನೆಯಿಂದ ಸಂಭವಿಸುವ ಸಾವು-ನೋವುಗಳನ್ನು ತಡೆಯುವ ನಿಟ್ಟಿನಲ್ಲಿ, ಎನ್.ಎ.ಬಿ.ಎಲ್. ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಇದಲ್ಲದೆ, ಗ್ರಾಮೀಣ ಭಾಗದಲ್ಲಿ ಜನರನ್ನು ಕಾಡುತ್ತಿರುವ ಇ-ಸ್ವತ್ತು ಸರ್ವರ್ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವಂತೆ ಹಾಗೂ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋ ಟ್ಯಾಗಿಂಗ್ ಮೂಲಕ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜುಲೈ 1ರಿಂದ ಜಾರಿಗೆ ಬರಲಿರುವ ಹೊಸ ಕೇಂದ್ರ ಸರ್ಕಾರದ ಕಾಯ್ದೆಯ ಅನುಷ್ಠಾನದ ಬಗ್ಗೆಯೂ ಇಲಾಖೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದು, ಸಾರಿಗೆ ಸಂಪರ್ಕವಿಲ್ಲದ ದುರ್ಗಮ ಗ್ರಾಮಗಳಿಗೆ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ, ರಂದೀಪ್ ಡಿ., ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂಧತಿ, ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಹಾಗೂ ಕುಡಿಯುವ ನೀರು ಪೂರೈಕೆ ವಿಭಾಗದ ಆಯುಕ್ತರಾದ ಫೌಜಿಯಾ ತರನ್ನುಂ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

Advertisement


This will close in 3 seconds