ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ರಾಜ್ಯದ ಜನತೆಗೆ ಸದ್ಯದಲ್ಲೇ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಹೆಚ್ಚಿಸಲು ಚರ್ಚೆಗಳು ಆರಂಭವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಸಾರಿಗೆ ನಿಗಮಗಳು ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ಪ್ರಸ್ತಾಪ ಮುಂದಿಟ್ಟಿವೆ. ಸತತವಾಗಿ ಏರಿಕೆಯಾಗುತ್ತಿರುವ ಡೀಸೆಲ್ ದರ ಹಾಗೂ ಹೆಚ್ಚುವರಿ ಸಿಬ್ಬಂದಿ ನೇಮಕಾತಿಯಿಂದಾಗಿ ನಿಗಮಗಳ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ಸಂಸ್ಥೆಗಳು ತಿಳಿಸಿವೆ.

ಮೂಲಗಳ ಪ್ರಕಾರ, ಸಾರಿಗೆ ನಿಗಮಗಳ ಸಿಬ್ಬಂದಿ ವೇತನದ ಬಾಕಿ ಒಟ್ಟು 1,271 ಕೋಟಿ ರೂಪಾಯಿಗಳಷ್ಟಿದೆ. ಇದರಲ್ಲಿ ಕೇವಲ 450 ಕೋಟಿ ರೂಪಾಯಿ ಮಾತ್ರ ಸದ್ಯಕ್ಕೆ ಬಿಡುಗಡೆಯಾಗಿದೆ. ಬಾಕಿ ಉಳಿದಿರುವ ಆರ್ಥಿಕ ಹೊರೆಯನ್ನು ನಿಭಾಯಿಸಲು ಮತ್ತು ಡೀಸೆಲ್ ದರ ಏರಿಕೆಯ ನಷ್ಟವನ್ನು ಸರಿದೂಗಿಸಲು ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕು ಎಂದು ನಿಗಮಗಳು ಸರ್ಕಾರವನ್ನು ಕೋರಿವೆ.
ಕಳೆದ 2025ರ ಜನವರಿ 5ರಂದು ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಕೊನೆಯದಾಗಿ ಹೆಚ್ಚಿಸಲಾಗಿತ್ತು. ಇದೀಗ ಕೇವಲ ಒಂದೂವರೆ ವರ್ಷದ ಅವಧಿಯಲ್ಲಿ ಮತ್ತೊಮ್ಮೆ ದರ ಪರಿಷ್ಕರಣೆಗೆ ಸಾರಿಗೆ ಸಂಸ್ಥೆಗಳು ಒತ್ತಡ ಹೇರುತ್ತಿದ್ದು, ಇದಕ್ಕೆ ಸರ್ಕಾರ ಸಮ್ಮತಿ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.


Leave a Reply