
ಅಂಕೋಲಾ: ಜಮೀನಿನ ನಿಜವಾದ ಮಾಲೀಕರೇ ಬೇರೆಯವರಾಗಿದ್ದರೂ, ಅವರಂತೆಯೇ ನಕಲಿ ವ್ಯಕ್ತಿಗಳನ್ನು ಹಾಜರುಪಡಿಸಿ, ಸುಳ್ಳು ಸಹಿ ಹಾಗೂ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಯತ್ನಿಸಿದ ಪ್ರಕರಣವನ್ನು ಅಂಕೋಲಾ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಗ್ರಾಮದ ಸರ್ವೆ ನಂ. 79/ಎ4ರ 1 ಎಕರೆ 14 ಗುಂಟೆ ಜಮೀನು ಪ್ರಕರಣದ ಕೇಂದ್ರಬಿಂದು. ಪಿರ್ಯಾದಿದಾರರ ಕುಟುಂಬಕ್ಕೆ ಸೇರಿದ ಈ ಆಸ್ತಿಯನ್ನು ಅಂಕೋಲಾ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಪಿರ್ಯಾದಿದಾರರು ಹಾಗೂ ಅವರ ಸಹೋದರರೇ ಎಂಬಂತೆ ಬಿಂಬಿಸಿ, ನಕಲಿ ವ್ಯಕ್ತಿಗಳನ್ನು ಬಳಸಿಕೊಂಡು ಮಾರಾಟ ಮಾಡಲು ಮುಂದಾಗಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಸುಳ್ಳು ಸಹಿ ಮತ್ತು ದಾಖಲೆಗಳನ್ನು ಬಳಸಿ ಆಸ್ತಿಯನ್ನು ಪರಭಾರೆ ಮಾಡಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಅಂಕೋಲಾ ಠಾಣೆಯಲ್ಲಿ ಗುನ್ನೆ ನಂ.171/2026 ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.
ಸಿಸಿಟಿವಿ, ತಾಂತ್ರಿಕ ಮಾಹಿತಿ ಆಧರಿಸಿ ಬೇಟೆ… ಈ
ಪ್ರಕರಣ ಸಾಮಾನ್ಯ ವಂಚನೆಯಲ್ಲ ಎಂಬುದನ್ನು ಅರಿತ ಪೊಲೀಸರು ಆರೋಪಿಗಳ ಜಾಲದ ಬೆನ್ನುಹತ್ತಿದರು. ಉಪ ನೋಂದಣಾಧಿಕಾರಿ ಕಚೇರಿ ಸೇರಿದಂತೆ ಪ್ರಮುಖ ಸ್ಥಳಗಳ ಸಿಸಿಟಿವಿ ದೃಶ್ಯಾವಳಿ, ತಾಂತ್ರಿಕ ಮಾಹಿತಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಆರೋಪಿಗಳ ಚಲನವಲನದ ಕುರಿತು ಮಾಹಿತಿ ಕಲೆಹಾಕಲಾಯಿತು. ತನಿಖೆಯ ವೇಳೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಆತನಿಗೆ ವಿವಿಧ ಹಂತಗಳಲ್ಲಿ ಸಹಕರಿಸಿದವರ ಪಾತ್ರ ಬೆಳಕಿಗೆ ಬಂದಿದೆ.
ಐವರು ಆರೋಪಿಗಳ ಬಂಧನ…
ಪೊಲೀಸರ ಕಾರ್ಯಾಚರಣೆಯಲ್ಲಿ ಪ್ರಮುಖ ಆರೋಪಿ ಮಂಜುನಾಥ ಗೌಡ, ಹಾಗೂ ಆತನಿಗೆ ಸಹಕರಿಸಿದ ಆರೋಪಿಗಳಾದ ಶಂಕರ ಅಣ್ಣೇಕರ, ಚೆನ್ನಪ್ಪ ನಾಯ್ಕ, ದರ್ಶನ ಗೌಡ ಮತ್ತು ಯಂಕು ಗೌಡ ಬಂಧಿತರಾಗಿದ್ದಾರೆ.
ಪೊಲೀಸರ ವಿಚಾರಣೆಯಲ್ಲಿ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದ ಕೃತ್ಯದಲ್ಲಿ ತಮ್ಮ ಪಾತ್ರವನ್ನು ಒಪ್ಪಿಕೊಂಡಿದ್ದಾರೆ ಎನ್ನಾಗಿದೆ. ಬಂಧಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ.
ನ್ಯಾಯಾಂಗ ಬಂಧನ..
ಬಂಧಿತ ಆರೋಪಿಗಳನ್ನು ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಮಾನ್ಯ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಪ್ರಕರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಅವರ ಮಾರ್ಗದರ್ಶನದಲ್ಲಿ ಕಾರವಾರ ಉಪವಿಭಾಗದ ಡಿವೈಎಸ್ಪಿ ಎಸ್.ವಿ. ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪಿಐ ಚಂದ್ರಶೇಖರ ಮಠಪತಿ, ಪಿಎಸ್‌ಐಗಳಾದ ಗುರುನಾಥ ಹಾದಿಮನಿ, ವಿಶ್ವನಾಥ ನಿಂಗೋಳ್ಳಿ, ಲಲಿತಾ ರಜಪೂತ ಹಾಗೂ ಸಿಬ್ಬಂದಿಗಳಾದ ಮೊಹಮ್ಮದ್ ಶಫಿ ಶೇಖ್, ಮಹಾದೇವ ಸಿದ್ದಿ, ಗಿರೀಶ ಲಮಾಣಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆಸ್ತಿ ದಾಖಲೆಗಳನ್ನೇ ತಿರುಚಿ, ಮಾಲೀಕರನ್ನೇ ಬದಲಿಸುವ ಮಟ್ಟಕ್ಕೆ ವಂಚನೆಯ ಜಾಲ ಬೆಳೆದಿರುವುದು ಈ ಪ್ರಕರಣದಿಂದ ಮತ್ತೊಮ್ಮೆ ಬೆಳಕಿಗೆ ಬಂದಿದ್ದು, ಇಂತಹ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಂಕೋಲಾ ಪೊಲೀಸರ ಕಾರ್ಯಾಚರಣೆ ಮಹತ್ವ ಪಡೆದಿದೆ.















Leave a Reply