ಶಿರಸಿ: ನಗರದ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಅವಘಡದಿಂದ ವಿದ್ಯುತ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಹಾಗೂ ಕೇಂದ್ರದಲ್ಲಾಗಿರುವ ಹಾನಿಯ ಕುರಿತು ಶಾಸಕರು ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರಬಹುದಾದ ತಾಂತ್ರಿಕ ಅಂಶಗಳು, ಹಾನಿಯ ಪ್ರಮಾಣ ಹಾಗೂ ಕೈಗೊಂಡಿರುವ ದುರಸ್ತಿ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ಟಿ. ನಾಯ್ಕ್, ವಿದ್ಯುತ್ ವಿತರಣಾ ಕೇಂದ್ರದಲ್ಲಿನ ಬೆಂಕಿ ಅವಘಡದಿಂದ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆಗೆ ತೊಂದರೆಯಾಗಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ದುರಸ್ತಿ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಸಾಧ್ಯವಾದಷ್ಟು ಬೇಗ ಸಹಜ ವಿದ್ಯುತ್ ಪೂರೈಕೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ವಿದ್ಯುತ್ ಪೂರೈಕೆಯಲ್ಲಿ ಹೆಚ್ಚಿನ ವ್ಯತ್ಯಯ ಉಂಟಾಗದಂತೆ ಪರ್ಯಾಯ ವ್ಯವಸ್ಥೆಗಳನ್ನು ಬಳಸಿಕೊಂಡು ಅಗತ್ಯವಿರುವ ಪ್ರದೇಶಗಳಿಗೆ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.
ಶಾಸಕರ ಭೇಟಿ ಸಂದರ್ಭದಲ್ಲಿ ಎರಡೂ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.















Leave a Reply