ಯಲ್ಲಾಪುರ: ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯ ಕೃಷಿ, ಪರಿಸರ ಹಾಗೂ ಜನಜೀವನದ ಮೇಲೆ ಗಂಭೀರ ಪರಿಣಾಮ ಉಂಟಾಗುವ ಆತಂಕ ವ್ಯಕ್ತಪಡಿಸಿರುವ ಯಲ್ಲಾಪುರ ರಸ್ತೆ ತಡೆ ಸಂಚಾಲನಾ ಸಮಿತಿಯು, ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದೆ.
ಬೇಡ್ತಿ ಹಾಗೂ ಅಘನಾಶಿನಿ ನದಿಗಳ ನೀರನ್ನು ತಿರುಗಿಸಿ ಬಯಲುಸೀಮೆ ಪ್ರದೇಶಗಳಿಗೆ ಪೂರೈಸುವ ಉದ್ದೇಶದ ಬೃಹತ್ ನದಿ ಜೋಡಣೆ ಯೋಜನೆಗಳು ಜಿಲ್ಲೆಯ ನೈಸರ್ಗಿಕ ಸಂಪನ್ಮೂಲಗಳ ಮೇಲೆ ದುಷ್ಪರಿಣಾಮ ಬೀರಲಿವೆ. ಕೃಷಿ ಚಟುವಟಿಕೆ, ಜಲಮೂಲಗಳು, ಪರಿಸರ ಸಮತೋಲನ ಹಾಗೂ ಸ್ಥಳೀಯರ ಬದುಕಿಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ, ಇಂತಹ ಯೋಜನೆಗಳನ್ನು ಜಾರಿಗೊಳಿಸುವ ಮುನ್ನ ಜಿಲ್ಲೆಯ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಸಮಗ್ರ ಅಧ್ಯಯನ ನಡೆಸುವುದು ಅಗತ್ಯ ಎಂದು ಸಮಿತಿಯ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಈಗಾಗಲೇ ಹಲವು ಬೃಹತ್ ಯೋಜನೆಗಳಿಂದ ಪರಿಸರ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದೆ. ಈ ನಡುವೆಯೂ ಮತ್ತಷ್ಟು ವಿನಾಶಕಾರಿ ಯೋಜನೆಗಳನ್ನು ಪ್ರಸ್ತಾಪಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ನದಿ ತಿರುವು ಯೋಜನೆಗಳ ವಿರುದ್ಧ ಕಳೆದ ಒಂದು ವರ್ಷದಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿರಂತರ ಹೋರಾಟ ನಡೆಯುತ್ತಿದ್ದು, ಜನಸಮಾವೇಶ, ಪಾದಯಾತ್ರೆ, ವಿಜ್ಞಾನಿಗಳ ವಿಚಾರಗೋಷ್ಠಿ, ಪತ್ರ ಚಳವಳಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಮುಖರಿಗೆ ಮನವಿ ಸಲ್ಲಿಸುವ ಮೂಲಕ ವಿರೋಧ ವ್ಯಕ್ತಪಡಿಸಲಾಗುತ್ತಿದೆ.
ಪಕ್ಷ, ಜಾತಿ ಹಾಗೂ ಧರ್ಮದ ಭೇದವಿಲ್ಲದೆ ಜಿಲ್ಲೆಯ ಜನರು ಈ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಆದಾಗ್ಯೂ, ಬೇಡ್ತಿ (ಗಂಗಾವಳಿ)–ವರದಾ ನದಿ ತಿರುವು ಯೋಜನೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಹಂತ ತಲುಪಿದೆ. ಅಲ್ಲದೆ, ಯೋಜನೆಯ ಸ್ಥಳ ಪರಿಶೀಲನೆಗಾಗಿ ಖಾಸಗಿ ಕಂಪನಿಯೊಂದಕ್ಕೆ ಟೆಂಡರ್ ನೀಡಿರುವುದು ಹೋರಾಟಗಾರರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಸಮಿತಿ ತಿಳಿಸಿದೆ.
ಜಿಲ್ಲೆಯ ಜನರ ಬದುಕು ಮತ್ತು ಪರಿಸರದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಮುಂಬರುವ ನವೆಂಬರ್ 3ರಂದು ಯಲ್ಲಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲು ಸಮಿತಿ ನಿರ್ಧರಿಸಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ, ಯೋಜನೆಯನ್ನು ಸ್ಥಗಿತಗೊಳಿಸುವ ಕುರಿತು ಸ್ಪಷ್ಟ ಹಾಗೂ ಸಕಾರಾತ್ಮಕ ಭರವಸೆ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.
ನದಿ ತಿರುವು ಯೋಜನೆಗಳಿಂದ ಉಂಟಾಗಬಹುದಾದ ದುಷ್ಪರಿಣಾಮಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು, ಯೋಜನೆಯನ್ನು ಕೈಬಿಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸಮಿತಿಯ ಪ್ರಮುಖ ಬೇಡಿಕೆಯಾಗಿದೆ.
ಮನವಿ ಸ್ವೀಕರಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಉತ್ತರ ಕನ್ನಡ ಜಿಲ್ಲೆಯ ಧಾರಣಾ ಸಾಮರ್ಥ್ಯದ ಕುರಿತು ಸಮಗ್ರ ಅಧ್ಯಯನ ನಡೆಸಬೇಕೆಂದು ಅಭಿಪ್ರಾಯಪಟ್ಟರು. ಸೂಕ್ತ ಅಧ್ಯಯನವಿಲ್ಲದೆ ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈಗೊಂಡು ಯೋಜನೆಯನ್ನು ಅನುಷ್ಠಾನಗೊಳಿಸಬಾರದು. ಕೇಂದ್ರ ಸರ್ಕಾರದ ಮಟ್ಟದಲ್ಲಿಯೂ ಯೋಜನೆಯನ್ನು ಕೈಬಿಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ಪ್ರಧಾನ ಸಂಚಾಲಕ ಹರಿಪ್ರಕಾಶ ಕೋಣೆಮನೆ, ಸಂಚಾಲಕರಾದ ನರಸಿಂಹ ಸಾತೊಡ್ಡಿ, ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ, ವಿ.ಟಿ. ಹೆಗಡೆ, ವೆಂಕಟರಮಣ ಭಟ್ಟ ಕಿರಕುಂಭತ್ತಿ, ರಾಘವೇಂದ್ರ ಭಟ್ಟ ಹಾಸಣಗಿ, ಕೆ.ಟಿ. ಹೆಗಡೆ, ನಾಗರಾಜ ಕವಡಿಕೇರಿ, ಸುಬ್ಬಣ್ಣ ಉದ್ದಾಬೈಲ್, ರಘುಪತಿ ಹೆಗಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.















Leave a Reply