
ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ (ಸೈಕ್ಲೋನಿಕ್ ಸರ್ಕ್ಯುಲೇಷನ್) ಪ್ರಭಾವದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಸೆಪ್ಟೆಂಬರ್ 19 ರಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.


ಕರಾವಳಿ ಮತ್ತು ಮಲೆನಾಡು ಭಾಗ:
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸದ್ಯ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಆದರೆ ಸುಳ್ಯ, ಪುತ್ತೂರು, ಕಾರ್ಕಳ ಹಾಗೂ ಬೆಳ್ತಂಗಡಿ ತಾಲ್ಲೂಕುಗಳಲ್ಲಿ ಸಂಜೆ ಅಥವಾ ಮುಂಜಾನೆ ವೇಳೆ ಮೋಡ ಕವಿದ ವಾತಾವರಣ ಇರಲಿದೆ. ಸೆಪ್ಟೆಂಬರ್ 17 ರಿಂದ ಘಟ್ಟ ಪ್ರದೇಶಗಳಲ್ಲಿ ಮತ್ತು ಸೆಪ್ಟೆಂಬರ್ 20 ರ ನಂತರ ಕರಾವಳಿ ತೀರದಲ್ಲಿ ಮಳೆ ಆರಂಭವಾಗಬಹುದು. ಇತ್ತ ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 20 ರಿಂದ ಮಲೆನಾಡಿನಲ್ಲಿ ಮಳೆ ಚುರುಕಾಗಲಿದೆ.

ಒಳನಾಡಿನ ಜಿಲ್ಲೆಗಳ ಸ್ಥಿತಿ:
ಬೆಂಗಳೂರು, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು ಮತ್ತು ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಸೆಪ್ಟೆಂಬರ್ 19 ರಿಂದ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಮತ್ತೊಂದೆಡೆ, ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಕಡಿಮೆ ಇರಲಿದ್ದು, ಸೆಪ್ಟೆಂಬರ್ 18 ರಿಂದ ಗುಡುಗು ಸಹಿತ ಮಳೆ ಮತ್ತೆ ಆರಂಭವಾಗುವ ನಿರೀಕ್ಷೆಯಿದೆ.
















Leave a Reply